ಬಂಟ್ವಾಳ: ಮಕ್ಕಳ ಪ್ರತಿಭೆಯನ್ನು ಗುರುತಿಸಿ ಬೆಳೆಸುವಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ ಬಹಳ ಮುಖ್ಯ. ಮಕ್ಕಳಿಗೆ ಸ್ವತಂತ್ರವಾಗಿ ಯೋಚಿಸಲು, ಹೊಸ ವಿಷಯಗಳನ್ನು ಕಲಿಯಲು ಮತ್ತು ತಮ್ಮ ಆಸಕ್ತಿಯ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಅವಕಾಶ ನೀಡಬೇಕು.ಶಾಲೆಗಳಲ್ಲಿ ನಡೆಯುವ ಪ್ರತಿಭಾ ಕಾರಂಜಿ, ಕ್ರೀಡಾಕೂಟ, ವಿಜ್ಞಾನ ವಸ್ತುಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಹೊರಹಾಕಲು ಉತ್ತಮ ವೇದಿಕೆಗಳಾಗಿವೆ ಎಂದು ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಡಾಕ್ಟರ್ ಗಾಯತ್ರಿ ಈ ಪ್ರಕಾಶ್ ಹೇಳಿದರು.

ಅವರು ವೀರಕಂಬ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಲ್ಲಡ್ಕ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ – 2026 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳು ಮಣ್ಣಿನ ಮುದ್ದೆಯಂತಿದ್ದು, ಅವರಿಗೆ ಸರಿಯಾದ ಶಿಕ್ಷಣ ಮತ್ತು ಪ್ರೋತ್ಸಾಹ ನೀಡಿದರೆ ಸುಂದರ ಮೂರ್ತಿಗಳಾಗಿ ರೂಪುಗೊಳ್ಳುತ್ತಾರೆ. ಪ್ರತಿಯೊಂದು ಮಗುವಿನಲ್ಲಿರುವ ಪ್ರತಿಭೆಯನ್ನು ಗುರುತಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಅಭಿಪ್ರಾಯ ಪಟ್ಟರು.
ಯುವವಾಹಿನಿ (ರಿ) ಬಂಟ್ವಾಳ ಘಟಕದ ಅಧ್ಯಕ್ಷ ಕಿರಣ್ ಮಾತನಾಡಿಪ್ರತಿಯೊಂದು ಮಗುವೂ ಪ್ರತಿಭೆಯ ಗಣಿಯಾಗಿದೆ ಅದನ್ನು ಗುರುತಿಸಿ ಪ್ರೋತ್ಸಾಹಿಸುವುದೇ ನಿಜವಾದ ಶಿಕ್ಷಣ ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೊರಗಪ್ಪ ನಾಯ್ಕ ವಹಿಸಿದ್ದರು.
ಕೆಲಿಂಜ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮೋಹಿತ್ ಶೆಟ್ಟಿ, ವೀರಕಂಬ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ದಿನೇಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಂಬು ಕುಮಾರ್ ಶರ್ಮ, ಪಂಚಾಯತ್ ನಿಕಟಪೂರ್ವ ಉಪಾಧ್ಯಕ್ಷ ಜನಾರ್ಧನ ಪೂಜಾರಿ,ಕೆಲಿಂಜ ಶಾಲಾ ನಿಕಟಪೂರ್ವ ಅಧ್ಯಕ್ಷ ಹಮೀದ್, ಬಂಟ್ವಾಳ ತಾಲೂಕು ಪಿಡಬ್ಲ್ಯೂಡಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಶೈಲೇಶ್ ಕುರ್ಚಿಗುಡ್ಡೆ , ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಈಶ್ವರ ಭಟ್, ಸುಕುಮಾರ್ ಬಂಟ್ವಾಳ,ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಗಾಯತ್ರಿ, ಶಾಲಾ ನಾಯಕ ಮಹಮ್ಮದ್ ಹಾರೂನ್ ಫರ್ಹಾನ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಉದ್ಘಾಟನಾ ಕಾರ್ಯಕ್ರಮದ ಬಳಿಕ ಕಿರಿಯರ ಹಾಗೂ ಹಿರಿಯರ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳು ನಡೆಯಿತು
ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳ ಸುಮಾರು 300 ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.
ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್, ಬಿಐಆರ್ಟಿ ಸುರೇಖಾ, ಸಮೂಹ ಸಂಪನ್ಮೂಲ ವ್ಯಕ್ತಿ ಪ್ರತಿಮಾ, ಪ್ರಭಾರ ಸಮನ್ವಯಾಧಿಕಾರಿ ವಿದ್ಯಾ ಮೊದಲಾದವರು ಆಗಮಿಸಿ ಶುಭ ಹಾರೈಸಿ ದರು.
ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿಶೇಷ ಆಕರ್ಷಣೀಯ ಸೆಲ್ಫಿ ಕಾರ್ನರ್ ಮಾಡಲಾಗಿತ್ತು.
ಮಿನಿ ಲೈಬ್ರರಿ ರಿಕ್ಷಾ ಶಾಲಾ ಆವರಣದಲ್ಲಿ ನಿಲ್ಲಿಸಿ ಮಕ್ಕಳಿಗೆ ಓದು ಅಭ್ಯಾಸಗಳ ಬಗ್ಗೆ ಪ್ರೋತ್ಸಾಹಿಸಲು ಮಾಹಿತಿ ನೀಡಲಾಯಿತು.
ಮುಖ್ಯ ಶಿಕ್ಷಕಿ ಬೆನೆಡಿಕ್ಟಾ ಆಗ್ನೇಸ್ ಮಂಡೋನ್ಸಾ ಸ್ವಾಗತಿಸಿದರು, ಸಮೂಹ ಸಂಪನ್ಮೂಲ ವ್ಯಕ್ತಿ ಜ್ಯೋತಿ ಪ್ರಾಸ್ತಾವಿಕ ಮಾತುಗಳನ್ನಾಡಿದರು, ದೈಹಿಕ ಶಿಕ್ಷಕ ಇಂದು ಶೇಖರ್ ವಂದಿಸಿದರು. ಶಿಕ್ಷಕ ತೌಸೀಫ್ ಅಹ್ಮದ್ ಹಾಗೂ ಹಿರಿಯ ಶಿಕ್ಷಕಿ ಸಂಗೀತ ಶರ್ಮ ಕಾರ್ಯಕ್ರಮ ನಿರೂಪಿಸಿದರು. ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಶಾಲಾ ಶಿಕ್ಷಕಿಯರು ಸಹಕರಿಸಿದರು.
