ನವದೆಹಲಿ(ಮಾ.25): ಬಿಸಿಸಿಐ ಅಧ್ಯಕ್ಷ ಎನ್.ಶ್ರೀನಿವಾಸನ್’ಗೆ ಮತ್ತೆ ಕೋರ್ಟ್ ಕಂಟಕ ಶುರುವಾಗಿದೆ. ಐಪಿಎಲ್ ಬೆಟ್ಟಿಂಗ್ ಪ್ರಕರಣ ಸಂಬಂಧ ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಬೇಕೆಂದು ಸುಪ್ರೀಂಕೋರ್ಟ್ ಮಂಗಳವಾರ ಎನ್.ಶ್ರೀನಿವಾಸನ್ ಅವರಿಗೆ ಆದೇಶ ನೀಡಿದೆ. ಐಪಿಎಲ್ ಬೆಟ್ಟಿಂಗ್ ಪ್ರಕರಣದಲ್ಲಿ ನಿಷ್ಪಕ್ಷಪಾತದಿಂದ ತನಿಖೆ ನಡೆಯಲು ಶ್ರೀನಿವಾಸನ್ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಸರ್ವೋಚ್ಚ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಐಪಿಎಲ್ ಆರನೇ ಆವೃತ್ತಿಯಲ್ಲಿ ನಡೆದಿದೆ ಎನ್ನಲಾದ ಸ್ಪಾಟ್’ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ದಂಧೆ ಪ್ರಕರಣಗಳ ಸಂಬಂಧ ತನಿಖೆ ನಡೆಸಿದ ನ್ಯಾ| ಮುಕುಲ್ ಮುದ್ಗಲ್ ನೇತೃತ್ವದ ತನಿಖಾ ಸಮಿತಿ ಸಲ್ಲಿಸಿದ ವರದಿಯನ್ನು ಪರಿಶೀಲಿಸಿದ ಸುಪ್ರೀಂಕೋರ್ಟ್, ಇಂದು ಶ್ರೀನಿವಾಸನ್ ರಾಜೀನಾಮೆಗೆ ಆದೇಶ ನೀಡಿದೆ. ಈ ಹಗರಣದಲ್ಲಿ ಶ್ರೀನಿವಾಸನ್ ಅಳಿಯ ಗುರುನಾಥ್ ಮೇಯಪ್ಪನ್ ನೇರವಾಗಿ ಭಾಗಿಯಾಗಿದ್ದಾರೆ ಎಂದು ಸಮಿತಿಯ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಶ್ರೀನಿವಾಸನ್ ತಮ್ಮ ಅಳಿಯನನ್ನು ರಕ್ಷಿಸುವ ಸಲುವಾಗಿ ಹುದ್ದೆಯನ್ನು ತ್ಯಜಿಸಲು ನಿರಾಕರಿಸುತ್ತಿದ್ದಾರೆ ಎಂದು ಕೋರ್ಟ್ ತಿಳಿಸಿದೆ. ಈ ಪ್ರಕರಣದ ಮುಂದಿನ ವಿಚಾರಣೆ ಮಾರ್ಚ್ 27ರಂದು ನಡೆಯಲಿದೆ.
