ಮೂಡುಬಿದಿರೆ: ವ್ಯಕ್ತಿಯೋರ್ವ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ಕೊನೆಗೆ ಬೇರೆ ಯುವತಿಯೊಂದಿಗೆ ಮದುವೆಯಾಗಿರುವುದಾಗಿ ಆರೋಪಿಸಿ ಯುವತಿಯೋರ್ವರು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಿಸಿದ್ದಾರೆ. ಮೂಡುಬಿದರೆ ಪುರಸಭಾ ವ್ಯಾಪ್ತಿಯ ಮಾಸ್ತಿಕಟ್ಟೆಯ ಸತೀಶ್ ಎಂಬಾತ, ಪಾಲಡ್ಕ ಗ್ರಾಮದ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಕಳೆದ ಡಿಸೆಂಬರ್ ತಿಂಗಳಿನಿಂದ ಆಕೆಯೊಂದಿಗೆ ದೈಹಿಕ ಸಂಪರ್ಕವಿರಿಸಿಕೊಂಡಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಆದರೆ ಕೆಲವು ತಿಂಗಳ ಹಿಂದಷ್ಟೇ ಸತೀಶ್ ಮತ್ತೊಂದು ಯುವತಿಯನ್ನು ಮದುವೆಯಾಗುವುದರ ಮೂಲಕ ಆಕೆಯನ್ನು ವಂಚಿಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ತಿಳಿದ ಯುವತಿ ಇದೀಗ ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಆರೋಪಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
