ಕಾಂಗ್ರೆಸ್ ಬಲಪಡಿಸಲು ಸಚಿವ ರೈ ಕರೆ
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಸಂಗಬೆಟ್ಟು ಜಿಲ್ಲಾ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯಲ್ಲಿ ರೂ 36ಕೋಟಿ ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮೂಲಕ ಆರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಮನೆಗಳಿಗೆ ನಿರಂತರ ಶುದ್ಧ ಕುಡಿಯುವ ನೀರು ಪೂರೈಸುವ ಮಹತ್ತರ ಯೋಜನೆ ಕಾಮಗಾರಿ ತ್ವರಿತವಾಗಿ ನಡೆಯುತ್ತಿದೆ. ಇಲ್ಲಿನ ಬಹುತೇಕ ಗ್ರಾಮೀಣ ರಸ್ತೆಗಳಿಗೆ ಮುಂದಿನ ದಿನಗಳಲ್ಲಿ ವಿಸ್ತರಣೆ ಮತ್ತು ಡಾಂಬರೀಕರಣ ಕಾಮಗಾರಿ ನಡೆಸಲು ಚಿಂತನೆ ನಡೆಸಲಾಗಿದ್ದು, ಈ ಪ್ರದೇಶದಲ್ಲಿ ಕಾಂಗ್ರೆಸ್ ಜಿಲ್ಲಾ ಪಂಚಾಯಿತಿ ಸದಸ್ಯರನ್ನು ಆಯ್ಕೆಗೊಳಿಸುವ ಮೂಲಕ ಪಕ್ಷದ ಬಲವರ್ಧನೆಗೆ ಎಲ್ಲರೂ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ತಾಲ್ಲೂಕಿನ ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲಿಯನಡುಗೋಡು ಸಮೀಪದ ಕುರುಡಾಡಿ-ಉಳಗುಡ್ಡೆ ನೂತನ ರಸ್ತೆಯನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.

ಬಂಟ್ವಾಳ ವಿಧಾನಸಭಾ ಕ್ಷೇತ್ರವನ್ನು ಸಮಗ್ರ ಅಭಿವೃದ್ಧಿಪಡಿಸುವಲ್ಲಿ ಯಾವುದೇ ರೀತಿಯ ಉದಾಸೀನ ತೋರದೆ ನಿರಂತರ ಶ್ರಮವಹಿಸುತ್ತಿದ್ದು, ಸರ್ಕಾರದ ಸಾಧನೆಯನ್ನು ಮನೆ ಮನೆಗೆ ತಲುಪಿಸುವ ಜವಾಬ್ದಾರಿ ಪಕ್ಷದ ಕಾರ್ಯಕರ್ತರ ಮೇಲಿದೆ ಎಂದು ಅವರು ತಿಳಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ ಶಾಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ವಿನಯಾ, ಸದಸ್ಯರಾದ ಸುಧೀಂದ್ರ ಶೆಟ್ಟಿ ಕಲಾಯಿದಡ್ಡ, ಹರಿಣಿ, ಬೂಡ ಅಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ಕಾಂಗ್ರೆಸ್ ಮುಖಂಡ ಬಿ.ಎಚ್.ಖಾದರ್ ಮತ್ತಿತರರು ಶುಭ ಹಾರೈಸಿದರು.
ಇದೇ ವೇಳೆ ಕಳೆದ 20 ವರ್ಷಗಳ ಬೇಡಿಕೆ ಈಡೇರಿಸಿದಕ್ಕಾಗಿ ಸ್ಥಳೀಯ ಕುರುಡಾಡಿ, ಉಳಗುಡ್ಡೆ, ಕುಂಟಾಲಪಲ್ಕೆ ನಾಗರಿಕರು ಪ್ರಸಾದ್ ಶೆಟ್ಟಿ ನೇತೃತ್ವದಲ್ಲಿ ಸಚಿವರನ್ನು ಸನ್ಮಾನಿಸಿದರು.
ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನರೇಂದ್ರ ಬಾಬು, ಕಿರಿಯ ಎಂಜಿನಿಯರ್ ಜಗಧೀಶ ನಿಂಬಾಳ್ಕರ್, ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಿವಾನಂದ ರೈ, ಪ್ರಮುಖರಾದ ಜನಾರ್ದನ ಬಂಗೇರ, ಬೇಬಿ ಶೆಟ್ಟಿ, ರವಿಚಂದ್ರ ಶೆಟ್ಟಿ, ಗೋಪಾಲ ಬಂಗೇರ, ಮಹಾವೀರ ಜೈನ್, ಶೇಖರ, ಎಂ.ಎಚ್.ಉಸ್ಮಾನ್ ಸಂಗಬೆಟ್ಟು, ಆದಂ ಕುಂಞ ಮತ್ತಿತರರು ಉಪಸ್ಥಿತಿದ್ದರು.
ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರಭಾಕರ ಪ್ರಭು ಸ್ವಾಗತಿಸಿ, ಮಾಜಿ ಉಪಾಧ್ಯಕ್ಷ ದೇವಪ್ಪ ಕರ್ಕೇರ ವಂದಿಸಿದರು.
