ಬಂಟ್ವಾಳ: ಇಲ್ಲಿನ ಬೆಂಜನಪದವಿನ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಮಂಗಳೂರು ಉದ್ಯೋಗ ಮೇಳಕ್ಕೆ ಗುರುವಾರ ಚಾಲನೆ ದೊರೆತಿದೆ. ಮ್ಯಾಗ್ಸಸ್ಸೆ ಪ್ರಶಸ್ತಿ ಪುರಸ್ಕೃತ ಉದ್ಯಮಿ ಡಾ. ಎಚ್.ಹರೀಶ್ ಹಂದೆ ಉದ್ಯೋಗ ಮೇಳವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸರ್ಕಾರವನ್ನು ಟೀಕಿಸುವ ಬದಲು ಸರ್ಕಾರ ಒದಗಿಸುವ ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಯುವ ಸಮುದಾಯಕ್ಕೆ ಕರೆ ನೀಡಿದರು.

ಸರ್ಕಾರ 10 ಶೇಕಡಾ ಪ್ರಯತ್ನ ಮಾಡಿದರೆ 90 ಶೇಕಡ ಪ್ರಯತ್ನವನ್ನು ಉದ್ಯೋಗಾಕಾಂಕ್ಷಿಗಳು ಮಾಡಬೇಕು. ಆದರೆ ಇಲ್ಲಿ ಸರ್ಕಾರ ಜಿಲ್ಲಾಡಳಿತದ ಮೂಲಕ ಅಪಾರ ಸಂಖ್ಯೆಯ ಉದ್ಯೋಗಕಾಂಕ್ಷಿಗಳಿಗೆ ಉದ್ಯೋಗ ನೀಡಲು ಮುಂದಾಗಿರುವುದು ಶ್ಲಾಘನೀಯ ಎಂದರು. ನಿರುದ್ಯೋಗ ಯುವಕರನ್ನು ದಾರಿ ತಪ್ಪಿಸಲು ಅವಕಾಶ ಮಾಡಿಕೊಡುತ್ತದೆ. ಭಯೋತ್ಪಾದಕತೆ, ಧಾರ್ಮಿಕ ಅಸಹಿಷ್ಣುತೆಗಳನ್ನು ಹೆಚ್ಚಿಸಲು ಕಾರಣವಾಗುತ್ತದೆ. ಈ ನಿಟ್ಟಿನಲ್ಲಿ ಯುವಕರು ಉದ್ಯೋಗದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆ ವಹಿಸಿ ಮಾತನಾಡಿ ಸಣ್ಣ ಕೈಗಾರಿಕೆಗಳಿಗೆ ಸರ್ಕಾರದ ವತಿಯಿಂದ ಜಮೀನು ನೀಡವ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು. ದೇಶದ ಮಾನವ ಸಂಪನ್ಮೂಲವನ್ನು ಸದೃಢಗೊಳಿಸಿದಾಗ ಅದೇ ಒಂದು ಶಕ್ತಿಯಾಗುತದೆ ಉದ್ಯೋಗ ಮೇಳದಂತಹ ಕಾರ್ಯಕ್ರಮಗಳು ಜಿಲ್ಲೆಯ ಸಾಮಾಜಿಕ ಸಾಮರಸ್ಯಕ್ಕೆ ಪರೋಕ್ಷವಾಗಿ ಕಾರಣವಾಗುತ್ತದೆ. ಈ ಕಾರ್ಯಕ್ರಮವನ್ನು ಪ್ರತೀ ವರ್ಷ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಮೂಡ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಕಾಸಿಯಾದ ಪ್ರತಿನಿಧಿ ಕೆ.ಬಿ.ಅರಸಪ್ಪ, ಕೆನರಾ ಚೇಂಬರ್ ಅಧ್ಯಕ್ಷ ರಾಮಮೋಹನ ಪೈ ಮಾರೂರು, ವೃತ್ತಿ ಮತ್ತು ತರಬೇತಿ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷೆ ಪುಷ್ಪ ಲಕ್ಷ್ಮಣ ಸ್ವಾಮಿ, ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷೆ ದಿವ್ಯಪ್ರಭ ಚಿಲ್ತಡ್ಕ, ಉದ್ಯೋಗ ಮತ್ತು ತರಬೇತಿ ಇಲಾಖೆಯ ಆಯುಕ್ತ ಜೆ.ಮಂಜುನಾಥ, ಪರಿಸರ ಇಲಾಖೆಯ ಸದಸ್ಯ ಕಾರ್ಯದರ್ಶಿ ಶಾಂತಪ್ಪ, ಡಾ. ಇಪ್ತಿಕಾರ್ ಅಲಿ, ಕಾಲೇಜಿನ ಪ್ರಾಂಶುಪಾಲ ಗಣೇಶ್ ವಿ.ಭಟ್, ತಾಲೂಕು ಪಂಚಾಯಿತಿ ಅಧ್ಯಕ್ಷ ಯಶವಂತ ದೇರಾಜೆ, ಬೂಡ ಅಧ್ಯಕ್ಷ ಪಿಯೂಸ್ ರೊಡ್ರಿಗಸ್, ಅಮ್ಮುಂಜೆ ಗ್ರಾ.ಪಂ.ಅಧ್ಯಕ್ಷೆ ಪ್ರೇಮಲತಾ, ಜಿ.ಪಂ.ಮುಖ್ಯಕಾರ್ಯನಿರ್ವಾಹಣಾಧಿಕಾರಿ ಶ್ರೀವಿದ್ಯಾ, ಪೊಲೀಸ್ ವರಿಷ್ಠಾಧಿಕಾರಿ ಡಾ. ಶರಣಪ್ಪ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ, ವಿವೇಕ್ ಆಳ್ವ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಸ್ವಾಗತಿಸಿದರು. ಅಪರ ಜಿಲ್ಲಾಧಿಕಾರಿ ಕುಮಾರ್ ವಂದಿಸಿದರು, ಪತ್ರಕರ್ತ ಮನೋಹರ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.
ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ, ದ.ಕ.ಜಿಲ್ಲಾಡಳಿತ, ಕೆನರಾ ಇಂಜಿನಿಯರಿಂಗ್ ಕಾಲೇಜು ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಮಂಗಳೂರು ಉದ್ಯೋಗ ಮೇಳ ಆಯೋಜಿಸಲಾಗಿತ್ತು.










