ಬಂಟ್ವಾಳ: ಕರ್ನಾಟಕ ಸರಕಾರದ ಜನಪ್ರಿಯ ಯೋಜನೆಗಳನ್ನು ಜನತೆಗೆ ತಲುಪಿಸುವುದರ ಜೊತೆಗೆ ಬಂಟ್ವಾಳ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿ ಸಹಿತ ಮಂಗಳೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿ ತೆರೆಯುವ ಮೂಲಕ ಪಕ್ಷದ ಕಾರ್ಯಕರ್ತರಿಗೆ ಹೆಮ್ಮೆ ತರುವ ಕೆಲಸ ಆಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸಂತಸ ವ್ಯಕ್ತಪಡಿಸಿದರು. ಬಂಟ್ವಾಳ ಪೇಟೆಯಲ್ಲಿ ನಿರ್ಮಾಣಗೊಂಡ ನೂತನ ಕಟ್ಟಡದಲ್ಲಿ ಶನಿವಾರ ಆರಂಭಗೊಂಡ ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯ ಇತಿಹಾಸದಲ್ಲಿ ಪ್ರಥಮ ಬಾರಿಗೆ ಕಾಂಗ್ರೆಸ್ನಲ್ಲಿ ಯಾವುದೇ ಗೊಂದಲ ಇಲ್ಲದೆ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿರುವುದು ಶ್ಲಾಘನೀಯ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪಚಂದ್ರ ಶೆಟ್ಟಿ ಹೇಳಿದರು.
ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್ ಮತ್ತು ಅಬ್ಬಾಸ್ ಆಲಿ, ಬುಡಾ ಅಧ್ಯಕ್ಷ ಪಿಯೂಸ್ ಎಲ್.ರೊಡ್ರಿಗಸ್, ಪುರಸಭಾಧ್ಯಕ್ಷೆ ವಸಂತಿ ಚಂದಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯ ಬಿ.ಪದ್ಮಶೇಖರ ಜೈನ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಂ.ಎಸ್. ಮಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ, ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಿಥುನ್ ರೈ, ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಶಾಂತ ಕುಲಾಲ್, ಪುರಸಭಾ ಉಪಾಧ್ಯಕ್ಷೆ ಯಾಸ್ಮಿನ್, ಸದಸ್ಯರಾದ ಮಹಮ್ಮದ್ ನಂದರಬೆಟ್ಟು, ಜಗದೀಶ ಕುಂದರ್, ಪ್ರಮುಖರಾದ ಕೆ.ಪದ್ಮನಾಭ ರೈ, ಜನಾರ್ದನ ಚೆಂಡ್ತಿಮಾರ್ ಮತ್ತಿತರರು ಉಪಸ್ಥಿತರಿದ್ದರು.
ಇದೇ ವೇಳೆ ಕಟ್ಟಡ ನಿರ್ಮಾಣಕಾರ ಒಸ್ವಾಲ್ಡ್ ಗೋವಿಯಸ್ ಇವರನ್ನು ಸಮ್ಮಾನಿಸಲಾಯಿತು. ರಾಜೀವ ಕಕ್ಕೆಪದವು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪುರಸಭಾ ಸದಸ್ಯ ಸದಾಶಿವ ಬಂಗೇರ ವಂದಿಸಿದರು.



