ಬಂಟ್ವಾಳ: ಸರ್ಕಾರದ ಎಲ್ಲಾ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವಲ್ಲಿ ಶ್ರಮಿಸುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಹಾಗೂ ಭತ್ಯೆ ನೀಡುವಂತೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಶಾಖೆ ಒತ್ತಾಯಿಸಿದೆ.
ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ಸರ್ಕಾರಿ ನೌಕರರಿಗೆ ಸಮಾನವಾದ ವೇತನ ಹಾಗೂ ಭತ್ಯೆಗಳನ್ನು ನೀಡುವಂತೆ ಸರ್ಕಾರವನ್ನು ಒತ್ತಾಯಿಸುವ ಸಲುವಾಗಿ ಶುಕ್ರವಾರ ಅಪಾರಹ್ನ ಬಂಟ್ವಾಳ ತಾಲೂಕು ತಹಶೀಲ್ದಾರರ ಕಛೇರಿ ಆವರಣದಲ್ಲಿ ನಡೆಸಿದ ಬಹಿರಂಗ ಸಭೆಯಲ್ಲಿ ಈ ಆಗ್ರಹ ಕೇಳಿಬಂದಿದ್ದು, ವಿವಿಧ ಬೇಡಿಕೆಗಳುಳ್ಳ ಮನವಿಯನ್ನು ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಮಾತನಾಡಿ, ಸರ್ಕಾರಿ ನೌಕರರಿಗೆ ಸಾವಭಿಮಾನದಿಂದ ಬದುಕುವ ಅವಕಾಶವನ್ನು ನೀಡಬೇಕೆಂದು ಆಗ್ರಹಿಸಿದರು. ಸರ್ಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಶಾಖೆಯ ಅಧ್ಯಕ್ಷ ಉಮಾನಾಥ ರೈ ಮೇರಾವು ಮಾತನಾಡಿ, ರಾಜ್ಯ ಸರ್ಕಾರ ಮುಂದಿನ ಬಜೆಟ್ ನಲ್ಲಿ ವೇತನ ಪರಿಷ್ಕರಣೆಗಾಗಿ 10 ಸಾವಿರ ಕೋಟಿ ರೂಪಾಯಿಯನ್ನು ಮೀಸಲಿಡುವಂತೆ ಒತ್ತಾಯಿಸಿದರು.
ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜೋಯಲ್ ಲೋಬೋ, ಉಪತಹಶೀಲ್ದಾರರಾದ ಭಾಸ್ಕರ್, ಪರಮೇಶ್ವರ ಮೊಯಿಲಿ, ಜೆ.ಪಿ.ರೋಡ್ರಿಗಸ್, ವಿವಿಧ ಸಂಘಟನೆಗಳ ಪ್ರಮುಖರಾದ ಅಖಿಲ್ ಶೆಟ್ಟಿ, ನವೀನ್ ಪಿ.ಎಸ್, ಸಂತೋಷ್, ಜನಾರ್ಧನ, ಶಶಿಕುಮಾರ್, ಹರಿಪ್ರಸಾದ್ ಶೆಟ್ಟಿ, ಮಹಮ್ಮದ್ ತುಂಬೆ, ಮೊದಲಾದವರು ಉಪಸ್ಥಿತರಿದ್ದರು.
ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ನಾಯಕ್ ಸ್ವಾಗತಿಸಿದರು, ಶಿಕ್ಷಕ ಜಯರಾಮ್. ಎಂ. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
