ಬಂಟ್ವಾಳ: ವೇತನ ತಾರತಮ್ಯ, ಇಲಾಖೆಯ ನವೀಕರಣ ಹಾಗೂ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಜೂನ್ 4ರಂದು ಬೆಂಗಳೂರಿನಲ್ಲಿ ನಡೆಯುವ ಪೊಲೀಸರ ಶಾಂತಿಯುತ ಪ್ರತಿಭಟನೆಗೆ ಜಿಲ್ಲಾ ಪಂಚಾಯತ್ ಸದಸ್ಯ ತುಂಗಪ್ಪ ಬಂಗೇರ ಬೆಂಬಲ ಸೂಚಿಸಿದ್ದಾರೆ.
ಸಿಬ್ಬಂದಿಗಳ ಕೊರತೆಯಿಂದ ದಿನಕ್ಕೆ 14ರಿಂದ 18 ಗಂಟೆಗಳ ಕಾಲ ಕಾರ್ಯ ನಿರ್ವಹಿಸುವ ರಾಜ್ಯ ಪೊಲೀಸರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಕೆಲಸಕ್ಕೆ ತಕ್ಕ ವೇತನವೂ ಲಭಿಸುತ್ತಿಲ್ಲ. ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಪೊಲೀಸರ ವೇತನ ಅಲ್ಪವಾಗಿದ್ದು, ಮೂಲಭೂತ ಸೌಕರ್ಯದಿಂದ ವಂಚಿತರಾಗಿ ನರಳುತ್ತಿದ್ದಾರೆ ಎಂದು ಆರೋಪಿಸಿದ ಅವರು, ತಮಗಾಗುತ್ತಿರುವ ಅನ್ಯಾಯವನ್ನು ವಿರೋಧಿಸಿ ಜೂನ್ 4ರಂದು ಪೊಲೀಸರು ನಡೆಸುವ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ನೀಡಲಾಗುವುದು. ಸರಕಾರ ಕೂಡಲೇ ಪೊಲೀಸರ ಬೇಡಿಕೆಗಳನ್ನು ಈಡೇರಿಸಬೇಕು. ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಪೊಲೀಸರೊಂದಿಗೆ ಬೀದಿಗಿಳಿದು ಉಗ್ರ ಹೋರಾಟ ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
