ಬಂಟ್ವಾಳ:  ರಾಜ್ಯದಲ್ಲೇ ಮೊದಲ ಬಾರಿಗೆ 94ಸಿ ಯೋಜನೆಯಡಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಹಕ್ಕುಪತ್ರ ವಿತರಿಸಲಾಗಿದ್ದು, ಜಿಲ್ಲೆಯಲ್ಲಿ ಈಗಾಗಲೇ 94ಸಿ ಯೋಜನೆಯಡಿ ಒಟ್ಟು 70ಸಾವಿರ ಅರ್ಜಿ ಗ್ರಾಮೀಣ ಪ್ರದೇಶಗಳಿಂದ ಸಲ್ಲಿಕೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ತಾಲ್ಲೂಕಿನ ವಗ್ಗ ಪಚ್ಚಾಜೆ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಜನಸಂಪರ್ಕ ಸಭೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

5btl-vagga-11

ನಗರ ವ್ಯಾಪ್ತಿಯಲ್ಲಿ 94 ಸಿ.ಸಿ ಯೋಜನೆಯಡಿ ಅರ್ಜಿ ಸ್ವೀಕರಿಸಲು ಇದೇ 27ರತನಕ ಅವಧಿ ವಿಸ್ತರಿಸಲಾಗಿದ್ದು, ಈಗಾಗಲೇ ಒಟ್ಟು 24 ಸಾವಿರ ಅರ್ಜಿ ಸ್ವೀಕರಿಸಲಾಗಿದೆ ಎಂದರು. ರಾಜ್ಯ ಸರ್ಕಾರವು ಚುನಾವನಾ ಪ್ರಣಾಳಿಕೆಯಂತೆ ಬಹುತೇಕ ಎಲ್ಲಾ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಬಡಜನತೆಗೆ ಅನುಷ್ಠಾನಗೊಳಿಸಿದ್ದು, ಬಂಟ್ವಾಳ ಕ್ಷೇತ್ರದ ಎಲ್ಲಾ ರಸ್ತೆಗಳನ್ನು ವಿವಿಧ ಯೋಜನೆಯಡಿ ಅಭಿವೃದ್ಧಿ ಪಡಿಸಲಾಗಿದೆ. ಇಲ್ಲಿನ ಗ್ರಾಮೀಣ ಭಾಗದಲ್ಲಿ ರೂ ಬಹುಕೋಟಿ ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮತ್ತು ಪುರಸಭಾ ವ್ಯಾಪ್ತಿಯಲ್ಲಿ ರೂ 52ಕೋಟಿ ವೆಚ್ಚದಲ್ಲಿ ಸಮಗ್ರ ಕುಡಿಯುವ ನೀರಿನ ಯೋಜನೆ ಕೈಗೊಳ್ಳಲಾಗಿದೆ ಎಂದರು.

ಪುರಸಭಾ ವ್ಯಾಪ್ತಿಯಲ್ಲಿ ಸುಮಾರು ರೂ 62ಕೋಟಿ ವೆಚ್ಚದಲ್ಲಿ ಒಳಚರಂಡಿ ಯೋಜನೆ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮೂಲಕ ಮಂಜೂರಾತಿ ದೊರೆತಿದ್ದು, ಬಂಟ್ವಾಳ ಕ್ಷೇತ್ರದ ಪ್ರಮುಖ ನಾಲ್ಕು ರಸ್ತೆಗಳನ್ನು ಮೇಲ್ದರ್ಜೆಗೇರಿಸಿ ಅಭಿವೃದ್ಧಿ ಪಡಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು.  ಇದೇ ವೇಳೆ ಸುಮಾರು 400 ಮಂದಿಗೆ ವಿವಿಧ ಹಕ್ಕು ಪತ್ರ, 100 ಮಂದಿಗೆ ಪಿಂಚಣಿ ಪ್ರಮಾಣ ಪತ್ರ, ರಾಷ್ಟ್ರೀಯ ಕುಟುಂಬ ಸಹಾಯಧನ ಮತ್ತಿತರ ಮಂಜುರಾತಿ ಪತ್ರ ವಿತರಿಸಿದರು. ಇಲ್ಲಿನ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ಮತ್ತು ಉದ್ಘಾಟನೆ ನೆರವೇರಿಸಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಸಿ.ಬಂಗೇರ, ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ಬೂಡ ಅಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್, ಮಂಗಳೂರು ಉಪ ವಿಭಾಗಾಧಿಕಾರಿ ರೇಣುಕಾ ಪ್ರಸಾದ್ ಎ.ಸಿ., ಕಾರಿಂಜ ಕ್ಷೇತ್ರದ ಧರ್ಮದರ್ಶಿ ಪಿ.ಜಿನರಾಜ ಆರಿಗ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಬಿ.ಪದ್ಮಶೇಖರ ಜೈನ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಕೆ. ಸಂಜೀವ ಪೂಜಾರಿ ಕುಚ್ಚಿಗುಡ್ಡೆ, ಪ್ರಭಾಕರ ಪ್ರಭು, ಬೇಬಿ ಕೃಷ್ಣಪ್ಪ, ಸ್ವಪ್ನ ವಿಶ್ವನಾಥ ಪೂಜಾರಿ, ಕಾವಳಪಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಮೋದ್ ಕುಮಾರ್ ರೈ,ಪಿಲಾತಬೆಟ್ಟು ಗಾಮ ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದ, ಇನ್ಸ್ಪೆಕ್ಟರ್ ಬಿ.ಕೆ.ಮಂಜಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್, ಪಿಡಬ್ಲ್ಯುಡಿ ಕಾರ್ಯನಿರ್ವಾಹಕ ಎಂಜಿನಿಯರ್ ಉಮೇಶ್ ಭಟ್ ಮತ್ತಿತರರು ಇದ್ದರು.  ತಹಶೀಲ್ದಾರ್ ಪುರಂದರ ಹೆಗ್ಡೆ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಕಂದಾಯ ನಿರೀಕ್ಷಕ ನವೀನ್ ವಂದಿಸಿದರು. ಮಂಜು ವಿಟ್ಲ ಮತ್ತು ಆದಿರಾಜ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *