ಬಂಟ್ವಾಳ : ಮಹಿಳೆಯರು ತಮ್ಮ ಸಾಧನೆ, ಸಾಹಸಗಳ ಮೂಲಕ ತಾವು ಅಬಲೆಯರಲ್ಲ ಸಬಲೆಯರು ಎಂಬುದನ್ನು ಸಾಧಿಸಿತೋರುತ್ತಿದ್ದಾರೆ, ಕ್ರೀಡಾ ಕ್ಷೇತ್ರವೂ ಇದಕ್ಕೆ ಹೊರತಾಗಿಲ್ಲ ಎಂದು ಬಂಟ್ವಾಳ ಪುರಸಭೆಯ ಅಧ್ಯಕ್ಷ ರಾಮಕೃಷ್ಣ ಆಳ್ವ ಹೇಳಿದರು. ಅವರು ಭಾನುವಾರ ಬೆಳಿಗ್ಗೆ ಬಂಟ್ವಾಳದ ಎಸ್‍ವಿಎಸ್ ದೇವಳ ಪ್ರೌಢಶಾಲಾ ಮೈದಾನದಲ್ಲಿ ಬಂಟ್ವಾಳ ತಾಲೂಕು ಪಂಚಾಯತ್,ಬಂಟ್ವಾಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇದರ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನಡೆದ “ಮಹಿಳೆಯರಿಗಾಗಿ ಕ್ರೀಡಾಕೂಟ” ವನ್ನು ಉದ್ಘಾಟಿಸಿ ಮಾತನಾಡಿದರು.

ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಸುಂದರ ಪೂಜಾರಿ, ನಿರೂಪಣಾಧಿಕಾರಿ ನಟರಾಜ್, ಎಸ್‍ವಿಎಸ್ ದೇವಳ ಪ್ರೌಢಶಾಲೆಯ ಸಂಚಾಲಕ ಪುರುಷೋತ್ತಮ ಶೆಣೈ, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದ, ತಹಶೀಲ್ದಾರ್ ಪುರಂದರ ಹೆಗ್ಡೆ ತಾಲೂಕು ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಶರತ್ ಶೆಟ್ಟಿ, ಫಲ್ಗುಣಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಗೀತಾಜಯತೀರ್ಥ ವೇದಿಕೆಯಲ್ಲಿದ್ದರು.
ವಿಟ್ಲ ಶಿಶುಅಭಿವೃದ್ಧಿ ಯೋಜನಾಧಿಕಾರಿ ಸುಧಾಜೋಶಿ ಸ್ವಾಗತಿಸಿ, ಪ್ರಸ್ತಾವನೆಗೈದರು, ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಲ್ಲಿಕಾ ವಂದಿಸಿದರು. ಹಿರಿಯ ಮೇಲ್ವಿಚಾರಕಿ ಪುಷ್ಪಲತಾ ಕಾರ್ಯಕ್ರಮ ನಿರ್ವಹಿಸಿದರು.
