ಬಂಟ್ವಾಳ : ಅನಕ್ಷರಸ್ಥರು ಜಾಸ್ತಿ ಇರುವ ಕಡೆ ಬಾಲ್ಯ ವಿವಾಹ ಇರುತ್ತದೆ. ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ ಇದ್ದಲ್ಲಿ ಬಾಲ್ಯ ವಿವಾಹ ಹೆಚ್ಚಾಗಿರುತ್ತದೆ. ಬಡತನವು ಬಾಲ್ಯ ವಿವಾಹಕ್ಕೆ ಒಂದು ಕಾರಣವಾಗಿದೆ . ಇದರ ಜಾಗೃತಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ ಅಲ್ಲಲ್ಲಿ ನಡೆಯುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಚಂದ್ರಶೇಖರ ಯು. ನುಡಿದರು. ಅವರು ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ದ.ಕ.ಮತ್ತು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ , ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾ.ಪಂ., ಕಂದಾಯ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ತಾ.ಪಂ.ಸಭಾಂಗಣದಲ್ಲಿ ನಡೆದ ಕಾನೂನು ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೆರಾ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಹಾಯಕ ಸರಕಾರಿ ಅಭಿಯೋಜಕ ಎಂ.ಎಸ್.ಆಲಿ, ವಕೀಲರ ಸಂಘದ ಅಧ್ಯಕ್ಷ ವೆಂಕಟ್ರಮಣ ಶೆಣೈ , ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ ಬಂಗೇರಾ, ತಾ.ಪಂ.ಕಾರ್ಯ ನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದ ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿ ಚಂದ್ರಶೇಖರ್ ರಾವ್ ಪುಂಚಮೆ ಬಾಲ ಕಾರ್ಮಿಕ ವಿರೋಧಿ ಮತ್ತು ಬಾಲ್ಯ ವಿವಾಹ ನಿಷೇಧ ಕಾಯಿದೆ ಬಗ್ಗೆ ಮಾಹಿತಿ ನೀಡಿದರು. ಶಿಶು ಅಭಿವೃದ್ಧಿ ಇಲಾಖೆಯ ಮಲ್ಲಿಕಾ ಸ್ವಾಗತಿಸಿದರು. ಶಿಶು ಅಭಿವೃದ್ಧಿ ಇಲಾಖೆಯ ಸುಧಾ ಜೋ ಶಿ ವಂದಿಸಿದರು. ಪ್ರಧಾನ ಕಾರ್ಯದರ್ಶಿ ರಾಜಾರಾಂ ನಾಯಕ್ ಕಾರ್ಯಕ್ರಮ ನಿರೂಪಿಸಿದರು.
