ಬಂಟ್ವಾಳ: ಈ ಜಿಲ್ಲೆಯಲ್ಲಿ ಇಲಾಖೆಯ ಮೂಲ ಉದ್ದೇಶವಾದ ಶುದ್ದ ಕುಡಿಯುವ ನೀರು, ರಸ್ತೆ, ಚರಂಡಿ, ತ್ಯಾಜ್ಯ ವಿಲೇವಾರಿ, ಬೀದಿದೀಪ ಮೊದಲಾದ ಸೌಲಭ್ಯಗಳನ್ನು ಶಿಸ್ತುಬದ್ದವಾಗಿ ಜನರಿಗೆ ಒದಗಿಸಲಾಗಿದೆ ಎಂದು ಪೌರಾಡಳಿತ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು. ಮಂಗಳವಾರ ಸಂಜೆ ಬಂಟ್ವಾಳ ಪುರಸಭೆಗೆ ಭೇಟಿ ನೀಡಿದ ಅವರು ಇಲ್ಲಿನ ಅಭಿವೃದ್ದಿ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಗರ ಭಾಗದಲ್ಲಿ ವಾಸಿಸುವ ಜನರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವುದರಿಂದ ನಗರದಗಳ ಮೇಲೆ ಹೆಚ್ಚಿನ ಒತ್ತಡ ಬೀಳುತ್ತಿದ್ದು ಯೋಜನಾಬದ್ದವಾಗಿ ಶಾಶ್ವತ ಪರಿಹಾರ ಕಂಡು ಹಿಡಿಯಲು ಸರಕಾರ ಪ್ರಯತ್ನಿಸುತ್ತಿದೆ. ಬಯಲು ಶೌಚ ಮುಕ್ತ ಪುರಸಭೆಯನ್ನಾಗಿ ಘೋಷಿಸುವ ನಿಟ್ಟಿನಲ್ಲಿ ಶೌಚಾಲಯ ನಿರ್ಮಾಣಕ್ಕೆ ಅಗತ್ಯವಿದ್ದಲ್ಲಿ ಹೆಚ್ಚಿನ ಅನುದಾನ ನೀಡುತ್ತೇವೆ, ಒಳಚರಂಡಿ ನಿರ್ಮಾಣದಿಂದ ಹಾನಿಗೀಡಾಗಿರುವ ರಸ್ತೆಗಳ ದುರಸ್ತಗೆ ಅನುದಾನ ನೀಡುತ್ತೇವೆ, ಕಂಚಿನಡ್ಕ ಪದವಿನಲ್ಲಿ ಪುರಸಭೆಯ ಘನತ್ಯಾಜ್ಯ ವಿಲೇವಾರಿ ಘಟಕ ಆರಂಭಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡುತ್ತೇವೆ ಎಂದರು.
ಬಂಟ್ವಾಳ ಪುರಸಭೆಯ ಸಮಗ್ರ ಅಭಿವೃದ್ದಿಯ ದೃಷ್ಟಿಯಿಂದ ವಿವಿಧ ಯೋಜನೆಗಳಡಿ ಅನುದಾನ ಬಿಡುಗಡೆಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಪೌರಾಡಳಿತ ಸಚಿವ ಈಶ್ವರ್ ಖಂಡ್ರೆ ಅವರಲ್ಲಿ ಮನವಿ ಮಾಡಿಕೊಂಡರು. ಮೂಡಬಿದಿರೆ ಶಾಸಕ ಅಭಯಚಂದ್ರ ಜೈನ್, ಪುರಸಭೆ ಅಧ್ಯಕ್ಷ ರಾಮಕೃಷ್ಣ ಆಳ್ವ. ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಬೂಡ ಅಧ್ಯಕ್ಷ ಸದಾಶಿವ ಬಂಗೇರ, ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಯೋಜನಾ ನಿರ್ದೇಶಕ ಪ್ರಸನ್ನ, ಮುಖ್ಯಾಧಿಕಾರಿ ಸುಧಾಕರ್, ಪುರಸಭಾ ಸದಸ್ಯರು ಹಾಗೂ ಅಧಿಕಾರಿಗಳು ಹಾಜರಿದ್ದರು.
