ಬಂಟ್ವಾಳ:ಇಲ್ಲಿನ ಬಿ.ಸಿ.ರೋಡಿನಲ್ಲಿ ರೂ 10ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಮಿನಿ ವಿಧಾನಸೌಧದಲ್ಲಿ ಸಾಕಷ್ಟು ಸ್ಥಳಾವಕಾಶ ಇದ್ದರೂ ಇಲ್ಲಿನ ತಹಶೀಲ್ದಾರರ ಕೊಠಡಿ ಸೇರಿದಂತೆ ಯಾವ ಕೊಠಡಿಯಲ್ಲಿ ಯಾವ ಇಲಾಖೆ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಇಲ್ಲಿಗೆ ಬರುವ ಜನ ಸಾಮಾನ್ಯರಿಗೆ ತಿಳಿಯುವಂತೆ ಕನಿಷ್ಟ ನಾಮಫಕಲ ಅಳವಡಿಸಲು ಸಾಧ್ಯವಿಲ್ಲವೇ ಎಂದು ಆಡಳಿತ ಪಕ್ಷ (ಕಾಂಗ್ರೆಸ್) ಸದಸ್ಯ ಪ್ರಭಾಕರ ಪ್ರಭು ಪ್ರಶ್ನಿಸಿದ್ದಾರೆ.

ಬಂಟ್ವಾಳ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಅವರು ಗಮನ ಸೆಳೆದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ ಮಾಧವ ಮಾವೆ ಮಾತನಾಡಿ, ಸರ್ಕಾರದ ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಚಿತ ಅಡುಗೆ ಅನಿಲ ಮತ್ತಿತರ ಸಲಕರಣೆ ವಿತರಣೆ ವೇಳೆ ಸ್ಥಳೀಯ ಜನಪ್ರತಿನಿಧಿಗಳನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದರು. ಇದಕ್ಕೆ ತಾಲ್ಲೂಕು ಪಂಚಾಯಿತಿ ಸದಸ್ಯ ಕೆ. ಸಂಜೀವ ಪೂಜಾರಿ ಮತ್ತಿತರರು ಧ್ವನಿಗೂಡಿಸಿದರು. ಈ ಬಗ್ಗೆ ತಾಲ್ಲೂಕು ಪಂಚಾಯಿತಿ ಸದಸ್ಯೆ ಗೀತಾ ಚಂದ್ರಶೇಖರ್ ಸಹಿತ ಬಿಜೆಪಿ ಸದಸ್ಯರು ಇದನ್ನು ಅಲ್ಲಗಳೆದರು.
ಕಲ್ಲಡ್ಕ ಶ್ರೀರಾಮ ವಿದ್ಯಾಲಯ ಮತ್ತು ಪುಣಚ ಶ್ರೀದೇವಿ ಶಿಕ್ಷಣ ಸಂಸ್ಥೆಗೆ ಅಕ್ಷರ ದಾಸೋಹ ಸೌಲಭ್ಯ ಸ್ಥಗಿತಗೊಳಿಸಿರುವುದು, ಪಡಿತರಚೀಟಿಯಲ್ಲಿ ಹೆಸರು ಮತ್ತು ವಿಳಾಸ ತಿದ್ದುಪಡಿ ಸಂಕಷ್ಟಗಳ ಬಗ್ಗೆ ಸದಸ್ಯರು ಗಮನ ಸೆಳೆದರು. ಕರೋಪಾಡಿ ಗ್ರಾಮದಲ್ಲಿ 15 ಕುಟುಂಬಕ್ಕೆ ಶೌಚಾಲಯವೇ ಇಲ್ಲ ಎಂದು ಸದಸ್ಯ ಉಸ್ಮಾನ್ ಕರೋಪಾಡಿ ಆರೋಪಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯರಾದ ರವೀಂದ್ರ ಕಂಬಳಿ, ಮಮತಾ ಡಿ.ಎಸ್.ಗಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ರಮೇಶ ಕುಡ್ಮೇರು, ಲಕ್ಷ್ಮೀ ಗೋಪಾಲ ಆಚಾರ್ಯ, ಮಹಾಬಲ ಆಳ್ವ, ಆದಂ ಕುಂಞ ಹೈದರ್ ಕೈರಂಗಳ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು ಮತ್ತಿತರರು ಚರ್ಚೆಯಲ್ಲಿ ಪಾಲ್ಗೊಂಡರು.
ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ.ಬಂಗೇರ, ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯಾನ್ ಮಿರಾಂದ ಮತ್ತಿತರರು ಇದ್ದರು.
