ಮಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದನಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಕುಖ್ಯಾತ ಆರೋಪಿಗಳಿಬ್ಬರನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಮೂಡಬಿದ್ರಿ ಆಲಂಗಾರ್ ನ ಅಶ್ರಯ ಕಾಲೋನಿ ನಿವಾಸಿ ಅಬ್ದುಲ್ ರಝಾಕ್ (28), ಮಿಜಾರು ತೋಡಾರಿನ ನಿವಾಸಿ ಮೊಹಮ್ಮದ್ ಅರೀಫ್ (26) ಎಂದು ಗುರುತಿಸಲಾಗಿದೆ.
ಆರೋಪಿಗಳ ಪೈಕಿ ಅಬ್ದುಲ್ ರಝಾಕ್ ಎಂಬಾತನ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯ ಕಳಸ, ಬಾಳೂರು, ಬಾಳೆಹೊನ್ನೂರು, ಜಯಪುರ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ದನ ಕಳ್ಳತನ ಪ್ರಕರಣ ದಾಖಲಾಗಿದೆ. ಹಾಗೂ ಬಜ್ಪೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ಹೀಗೆ ಒಟ್ಟು 9 ಪ್ರಕರಣ ದಾಖಲಾಗಿದೆ.
ಆರೋಪಿ ಮೊಹಮ್ಮದ್ ಅರೀಫ್ ಎಂಬಾತನ ವಿರುದ್ಧ ಉಡುಪಿ ಜಿಲ್ಲೆಯ ಹೆಬ್ರಿ, ಅಜೆಕಾರು, ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ, ಕೊಡಗು ಜಿಲ್ಲೆಯ ಸೋಮವಾರಪೇಟೆ, ಶನಿವಾರಸಂತೆ, ಕುಶಾಲನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ದನಕಳ್ಳತನಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿದ್ದು, ಹೀಗೆ ಒಟ್ಟು 16 ಪ್ರಕರಣ ದಾಖಲಾಗಿದೆ.

