ಮಂಗಳೂರು: ವಿಧಾನ ಸಭೆ ಚುನಾವಣಾ ಹಿನ್ನೆಲೆ ಪ್ರಚಾರಕ್ಕೆಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಎ.27ರಂದು ಬಂಟ್ವಾಳಕ್ಕೆ ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಮಂಗಳವಾರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎ.27ರಂದು ಬೆಳಗ್ಗೆ ಬಂಟ್ವಾಳಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ ಬಿ.ಸಿ.ರೋಡ್ ಸಮೀಪದ ಜೋಡುಮಾರ್ಗ ಉದ್ಯಾನವನದಲ್ಲಿ ನಡೆಯುವ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಚುನಾವಣಾ ಟಿಕೆಟ್ ಹಂಚಿಕೆಗೆ ಸಂಬಂಧಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ. ಸಂಸದ ನಳಿನ್ ಕುಮಾರ್ ಕಟೀಲು ಹೇಳಿರುವಂತೆ ನನಗೆ ವಿಶ್ರಾಂತಿಯ ಅಗತ್ಯವಿಲ್ಲ, ನಳಿನ್ಗೆ ಇರಬಹುದು. ವರ್ಷದೊಳಗೆ ಅವರಿಗೆ ಸಂಪೂರ್ಣ ವಿಶ್ರಾಂತಿ ಕೊಡುತ್ತೇವೆ ಎಂದು ವ್ಯಂಗ್ಯವಾಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕಾಂಗ್ರೆಸ್ ಪಕ್ಷದ ದ.ಕ. ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮುಖಂಡರಾದ ಯು.ಬಿ.ವೆಂಕಟೇಶ್, ರಾಜನಾಥ ಕೋಟ್ಯಾನ್, ಇಬ್ರಾಹೀಂ ಕೋಡಿಜಾಲ್ ಮತ್ತಿತರರು ಉಪಸ್ಥಿತರಿದ್ದರು.

