ಮಂಗಳೂರು: ಪ್ರಧಾನಿ ಮೋದಿಯವರ ಜನಪರ ಆಡಳಿತದ ಫಲವಾಗಿ ಕರ್ನಾಟಕದಲ್ಲಿ ಬಿಜೆಪಿ ಬಹುಮತದೊಂದಿಗೆ ಆಡಳಿತಕ್ಕೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸುದೇಶ್ ವರ್ಮ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ನ ದುರಾಡಳಿತದಿಂದ ಕರಾವಳಿ ಭಾಗದಲ್ಲಿ ನಿರಂತರವಾಗಿ ಹಿಂದೂ ಕಾರ್ಯಕರ್ತರ ಹತ್ಯೆ ನಡೆಯುತ್ತಿದ್ದು, ಇದಕ್ಕೆ ಪೂರಕವಾಗಿ ಸರಕಾರ ಕ್ರಿಮಿನಲ್ ಚಟುವಟಿಕೆ ನಡೆಸುವವರಿಗೆ ಬೆಂಬಲ ನೀಡುವ ಕಾರ್ಯವನ್ನು ಮಾಡುತ್ತಿದೆ. ಕೇಂದ್ರ ಸರಕಾರ ನೀಡಿದ ಅನುದಾನವನ್ನೂ ರಾಜ್ಯ ಸರಕಾರ ಸರಿಯಾಗಿ ಬಳಕೆ ಮಾಡಿಲ್ಲ ಎಂದು ಗಂಭೀರವಾಗಿ ಆರೋಪಿಸಿದರು.
ರಾಜ್ಯ ವಕ್ತಾರ ಅನ್ವರ್ ಮಾಣಿಪ್ಪಾಡಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಕೋಮುಭಾವನೆ ಕೆರಳಿಸಿ ಅಧಿಕಾರಕ್ಕೆ ಬರುವ ಪ್ರಯತ್ನ ಮಾಡುತ್ತಿದ್ದು, ಕೋಮುಗಲಭೆಗಳು ನಡೆದಾಗ ಕಾಂಗ್ರೆಸ್ಗೆ ಹೆಚ್ಚು ಲಾಭವಾಗುತ್ತದೆ ಎಂದು ಯುಎನ್ ಒ ವರದಿ ಮಾಡಿದೆ ಎಂದರು.
ಹಜ್ ಭವನ ನಿರ್ಮಾಣಕ್ಕೆ ಬಿಜೆಪಿ ಸರಕಾರ 50 ಕೋ.ರೂ. ನೀಡಿತ್ತು. ಕ್ರೈಸ್ತರ ಅಭಿವೃದ್ಧಿ ನಿಗಮಕ್ಕೂ 50 ಕೋ.ರೂ.ಗಳನ್ನು ಬಿಜೆಪಿ ನೀಡಿತ್ತು. ಬಿಜೆಪಿಯು ಅಲ್ಪಸಂಖ್ಯಾತರನ್ನು ಎಂದಿಗೂ ಬಡವರಾಗಲು ಬಿಡುವುದಿಲ್ಲ ಎಂದು ತಿಳಿಸಿದರು.

