ಮಂಗಳೂರು: ದ.ಕ. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭಗೊಂಡಿದ್ದು, ನಗರದ ಬೊಂದೇಲ್‌ನ ಮಹಾತ್ಮಗಾಂಧಿ ಶತಾಬ್ಧಿ ಹಿ. ಪ್ರಾ. ಶಾಲೆ/ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮತ ಎಣಿಕೆ ಕೇಂದ್ರದಲ್ಲಿ ವಿವಿಧ ಪಕ್ಷಗಳ, ಪಕ್ಷೇತರ ಅಭ್ಯರ್ಥಿಗಳು, ಮುಖಂಡರು, ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಸೇರಿದ್ದು, ತಮ್ಮದೇ ಆದ ಲೆಕ್ಕಾಚಾರದಲ್ಲಿ ಮುಳುಗಿದ್ದಾರೆ.
ಮೊದಲು ಅಂಚೆ ಮತಗಳ ಎಣಿಕೆ ನಡೆಯಲಿದ್ದು, ಬಳಿಕ ಇವಿಎಂನಲ್ಲಿ ದಾಖಲಾದ ಮತಗಳ ಎಣಿಕೆ ನಡೆಯಲಿದೆ. ಪ್ರತಿ ಮತ ಎಣಿಕೆ ಟೇಬಲ್‌ನಲ್ಲಿ ಮತ ಎಣಿಕೆ ಮೇಲ್ವಿಚಾರಕರು, ಸಹಾಯಕ ಸಿಬ್ಬಂದಿ ಮತ್ತು ಮೈಕ್ರೋ ವೀಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ.
ಜಿಲ್ಲೆಯ 1858 ಮತಗಟ್ಟೆಗಳ ಮತ ಎಣಿಕೆಯು ಗರಿಷ್ಠ 18 ಸುತ್ತುಗಳಲ್ಲಿ ನಡೆಯಲಿವೆ. ಮತ ಎಣಿಕೆಯ ಕೊಠಡಿಗಳಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮತ್ತು ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

