ಬಂಟ್ವಾಳ: ಬೈಕ್ ಗೆ ಟಿಪ್ಪರ್ ಲಾರಿವೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟರೆ, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬ್ರಹ್ಮರಕೂಟ್ಲು ಟೋಲ್ ಗೇಟ್ ಬಳಿ ಶನಿವಾರ ರಾತ್ರಿ ನಡೆದಿದೆ.
ತಾಲೂಕಿನ ಪರ್ಲಿಯಾ ನಿವಾಸಿ ಇಕ್ಬಾಲ್ (38) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಬಶೀರ್ (30) ಗಾಯಗೊಂಡರು ಎಂದು ತಿಳಿದುಬಂದಿದೆ.
ಇವರಿಬ್ಬರು ಬೈಕ್ ನಲ್ಲಿ ಮಂಗಳೂರು ಕಡೆ ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಢಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

