ಕೋಲಾರ: ಕೇರಳ ರಾಜ್ಯದಲ್ಲಿ ಕಾಣಿಸಿಕೊಂಡಿರುವ ನಿಫಾ ವೈರಸ್ ಬಗ್ಗೆ ಯಾರು ಆತಂಕ ಪಡಬೇಕಿಲ್ಲ. ಆದರೆ ಪ್ರತಿಯೊಬ್ಬರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಮೂಲಕ ವೈರಸ್ ಬರದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಸತ್ಯವತಿ ತಿಳಿಸಿದ್ದಾರೆ.
ಶುಕ್ರವಾರ ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ನಿಫಾ ವೈರಸ್ ಕಾಯಿಲೆ ತಡೆಗಟ್ಟುವಿಕೆಯಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಚರ್ಚಿಸಲು ಕರೆದಿದ್ದ ಅಂತರ್ ಇಲಾಖಾ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಬೀದಿಗಳಲ್ಲಿ ಹಂದಿಗಳನ್ನು ಬಿಟ್ಟು ಸಾಕುವಂತಿಲ್ಲ. ಸಂಬಂಧಿಸಿದ ನಗರಸಭೆಗಳು ಕೂಡಲೆ ಕ್ರಮ ವಹಿಸಬೇಕು. ಎಚ್.ಕ್ರಾಸ್‍ನಲ್ಲಿ ನಡೆಯುವ ಹಂದಿಗಳ ಮಾರಾಟ ಸಂತೆಯನ್ನು ತಾತ್ಕಾಲಿಕವಾಗಿ ನಿಷೇಧಿಸಿ, ನಗರಸಭೆ ಅಧಿಕಾರಿಗಳು ಮತ್ತು ಆರೋಗ್ಯ ನಿರೀಕ್ಷಕರು ಕಸ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಶಾಲಾ ಮಕ್ಕಳು ಸೋಪಿನಿಂದ ಕೈ ತೊಳೆದು ಊಟ ಮಾಡುವಂತೆ ಅಗತ್ಯ ಕ್ರಮ ವಹಿಸುವಂತೆ ಡಿಡಿಪಿಐಗೆ ಇದೇ ವೇಳೆ ಸೂಚಿಸಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಿಜಯಕುಮಾರಿ ಮಾತನಾಡಿ, ನಿಪಾ ವೈರಸ್ ಬರದಂತೆ ಕ್ರಮ ವಹಿಸಲು ಎಲ್ಲಾ ಇಲಾಖೆಗಳ ಸಹಕಾರ ಅತ್ಯಗತ್ಯ. ಪಶು ಸಂಗೋಪನಾ ಇಲಾಖೆ, ಅಬಕಾರಿ ಇಲಾಖೆ, ಅರಣ್ಯ ಇಲಾಖೆ, ಶಿಕ್ಷಣ ಇಲಾಖೆ, ತೋಟಗಾರಿಕೆ ಮತ್ತು ಕೃಷಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ವೈದ್ಯಕೀಯ ಇಲಾಖೆ ಹಾಗೂ ನಗರ ಸಭೆಗಳು ತಮ್ಮ ವ್ಯಾಪ್ತಿಯ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಕೆ. ವಿದ್ಯಾಕುಮಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವಿಜಯಕುಮಾರ್, ಅಬಕಾರಿ ಉಪ ಆಯುಕ್ತ ಸುಮಿತ್ರಾ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

