ಮಂಗಳೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮತ್ತು ನಗರ ಪೊಲೀಸ್, ಮಂಗಳೂರು ವಕೀಲರ ಸಂಘ, ಜಿಲ್ಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಜನಸಾಮಾನ್ಯರಲ್ಲಿ ಕಾನೂನು ಅರಿವು ಮೂಡಿಸುವ ಸಲುವಾಗಿ ಮಂಗಳೂರು ನಗರ ಮತ್ತು ತಾಲೂಕಿನಾದ್ಯಂತ ಮೇ 28ರಿಂದ ಕಾನೂನು ಸಾಕ್ಷರತಾ ರಥ ಹಾಗೂ ಸಂಚಾರಿ ಜನತಾ ನ್ಯಾಯಾಲಯ ಅಭಿಯಾನ ಆಯೋಜಿಸಲಾಗಿದೆ.
ಮೇ 28ರಂದು ಬೆಳಗ್ಗೆ 9.30ಕ್ಕೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ. ಎಸ್. ಬೀಳಗಿ ಉದ್ಘಾಟಿಸುವರು. ಈ ವೇಳೆ ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಪೊಲೀಸ್ ಆಯುಕ್ತ ವಿಪುಲ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಂ. ಆರ್. ರವಿ, ಪೊಲೀಸ್ ಅಧೀಕ್ಷಕ ಡಾ.ರವಿಕಾಂತೇ ಗೌಡ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
